ಪ್ರವಾಹ ಹಿನ್ನೆಲೆ ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ

79

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಕೃಷ್ಣ, ಭೀಮಾ, ದೋಣಿ ನದಿಗಳಲ್ಲಿ ಹಠಾತ್ ಪ್ರವಾಹ ಬರುವ ಸಾಧ್ಯತೆ ಇರುವುದರಿಂದ ಜನರು ನದಿ  ಪಾತ್ರ ಹಾಗೂ ಹಳ್ಳ ಕೊಳ್ಳಗಳ ಕಡೆಗೆ ತೆರಳದಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿವೆ. ಹೀಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಸಣ್ಣ ನೀರಾವರಿ, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಕೆಬಿಜಿಎನ್ ಎಲ್ ಹಾಗೂ ಕೆಎಸ್ಎನ್ಎಲ್ ಅಧಿಕಾರಿಗಳು, ಸಿಬ್ಬಂದಿ ಮಳೆಗಾಲ ಪೂರ್ಣಗೊಳ್ಳುವವರೆಗೂ ರಜೆಯ ಮೇಲೆ ತೆರಳದೆ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸಲು ಬೇಕು.

ಕರ್ತವ್ಯದ ದಿನಗಳಲ್ಲಿ, ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಲ್ಲಾಡಳಿತದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಸೂಚಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಮಾತ್ರ ಜಿಲ್ಲಾಡಳಿತ ಅನುಮತಿ ಪಡೆದು ರಜೆ ಪಡೆಯತಕ್ಕದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಜಿಲ್ಲಾ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಕೆಸಿಎಸ್ ಆರ್ 1957 ರನ್ವಯ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




error: Content is protected !!