ಪ್ರವಾಹ, ಮುಂಜಾಗ್ರತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

66

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಾರಣ ದೋಣಿ ನದಿ ಪಾತ್ರಗಳಿಗೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭುಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆಯಲ್ಲಿ ಅವಶ್ಯಕ ಮುಂಗಾರು ಮಳೆ ಮುಂಜಾಗ್ರತೆ ಕ್ರಮಗಳನ್ನು ಸೂಚಿಸಿದ್ದು, ಜಿಲ್ಲೆಯ ಮಧ್ಯಭಾಗದಲ್ಲಿ ಹರಿದಿರುವ ದೋಣಿ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆಗಳ ಅಡಿಯಲ್ಲಿ ಮಳೆಯ ನೀರು ಸರಾಗವಾಗಿ ಹರಿದುಹೋಗುವಂತೆ ವಾರ್ಷಿಕ ನಿರ್ವಹಣೆ ಕಾರ್ಯ ಕೈಗೊಳ್ಳಲಿರುವುದರಿಂದ ನದಿಯ ಪಾತ್ರದಲ್ಲಿ ಹೂಳು ತುಂಬಿ ಮಳೆಗಾಲದ ಸಂದರ್ಭಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಲಿದೆ. ಆದುದರಿಂದ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಸೇತುವೆಗಳ ನಿಯಮಾನುಸಾರ ತುರ್ತಾಗಿ ವಾರ್ಷಿಕ ನಿರ್ವಹಣೆ ಕಾರ್ಯ ಕೈಗೊಂಡು ಪ್ರವಾಹದ ನೀರು ಸರಾಗವಾಗಿ ಹರಿದುಕೊಂಡು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಜೂನ್ 15ರ ಒಳಗಾಗಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಮುಂಜಾಗ್ರತ ಕ್ರಮ ಕೈಗೊಳ್ಳದೆ ಪ್ರವಾಹ ಪರಿಸ್ಥಿತಿಯಿಂದಾಗಿ ಅನಾಹುತಗಳು ಆಗಿದ್ದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಜಿಲ್ಲಾ ವಿಪತ್ತು ನಿರ್ವಹಣಾ ಕಾಯ್ದೆ – 2005 ಮತ್ತು ಕೆಸಿಎಸ್ ಆರ್ ಅನ್ವಯ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




error: Content is protected !!