ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ರ್ಯಾಲಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಬೊಮ್ಮಾಯಿ ಅವರು ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ ಅವರು ಇವರ ಪರ ವಾದ ಮಂಡಿಸಿದ್ದರು. ಹೆಚ್ಚುವರಿ ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಎನ್ ಜಗದೀಶ ಬೊಮ್ಮಾಯಿ ವಿರುದ್ಧ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಆರ್ ಕೃಷ್ಣಕುಮಾರ್ ಅವರು ಎರಡೂ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನವೆಂಬರ್ 2024ರಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಬೊಮ್ಮಾಯಿಯವರು, ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ ಎಂದು ಹೇಳಿದ್ದರು.