ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 371ಜೆ ಮೀಸಲಾತಿಗೆ ಸಂಬಂಧಿಸಿದಂತೆ ಆಗಸ್ಟ್ 11, ಸೋಮವಾರ ಮುಂಜಾನೆ 10 ಗಂಟೆಗೆ ನಗರದ ಶಿವಾಜಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು, ಸಂವಿಧಾನಕ್ಕೆ 371ಜೆ ತಿದ್ದುಪಡಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ಕುಂಭಕರ್ಣ ನಿದ್ರೆಗೆ ಜಾರಿದ್ದರಿಂದ ನಮ್ಮ ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಘೋರ ಅನ್ಯಾಯವಾಗಿದೆ. ಜಿಲ್ಲೆಯ ಮಕ್ಕಳನ್ನು ಹಾಗೂ ಯುವಕರಿಗೆ ಸಿಗಬೇಕಾದ ಮೀಸಲಾತಿಯನ್ನು ವಂಚಿಸಿದ್ದರ ಹಿಂದೆ ಸ್ವಾರ್ಥ ರಾಜಕೀಯ ಅಡಗಿದೆ. ಕಳೆದ 11 ವರ್ಷಗಳಿಂದ ವಿಜಯಪುರ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದೆ ಎಂದಿದ್ದಾರೆ.
371ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಕೈ ಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಜಿಲ್ಲೆಗೆ ಸಿಗಬೇಕಾದ ನ್ಯಾಯಯುತ ಹಕ್ಕನ್ನು ಪಡೆಯಲು ರೈತ ಭಾರತ ಪಕ್ಷದಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಹಲವರು ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಹಕ್ಕುಗಳನ್ನು ಪಡೆಯುವ ಸಲುವಾಗಿ ಸಾರ್ವಜನಿಕರು ಭಾಗವಹಿಸಬೇಕು. ಜಿಲ್ಲೆಯ ಸಮಸ್ತ ಜನತೆ ಮುಖ್ಯವಾಗಿ ವಿದ್ಯಾರ್ಥಿಗಳು, ಯುವಕ, ಯುವತಿಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ನ್ಯಾಯಯುತ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.