ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುರುಡೇಶ್ವರ ಹತ್ತಿರದ ಸಮುದ್ರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಹೇಳಿದ್ದಾರೆ.