ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಹೊಸಪೇಟೆಯಲ್ಲಿ 1920, 1926, 1947 ಹಾಗೂ 1958 ಹೀಗೆ ನಾಲ್ಕು ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆದಿದೆ. ಈ ಬಾರಿ ಬಳ್ಳಾರಿ ಹಾಗೂ ವಿಜಯನಗರ ಎರಡೂ ಕೂಡಿಕೊಂಡು ಸಮ್ಮೇಳನ ನಡೆಸಲಾಗುವುದು. ಇಲ್ಲಿನ ಹವಾಗುಣಕ್ಕೆ ಅನುಗುಣವಾಗಿ ಡಿಸೆಂಬರ್ ನಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಬಳ್ಳಾರಿ ಮೊದಲ ಜಿಲ್ಲಾಧಿಕಾರಿ ಥಾಮಸ್ ಮನ್ರೋ ಅವರ ಕುಟುಂಬಸ್ಥರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಕನ್ನಡದಲ್ಲಿ ಆಡಳಿತ ನಡೆಸಿದ ಕಾರಣಕ್ಕೆ ಅವರ ಕುಟುಂಬಸ್ಥರನ್ನು ಆಹ್ವಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.