ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ಬೆಳ್ಳಂಬೆಳಗ್ಗೆ ಕೆಎಸ್ಆರ್ ಟಿಸಿ ಬಸ್ ವೊಂದು ಅಪಘಾತಗೊಂಡು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಹತ್ತಿರದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಮುಂಜಾನೆ ಅಪಘಾತ ಸಂಭವಿಸಿದೆ. ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೆಎ-10, ಎಫ್-0520 ನಂಬರಿನ ಕೆಎಸ್ಆರ್ ಟಿಸಿ ಬಸ್ ಬೆಂಗಳೂರಿನಿಂದ ಕೊಳ್ಳೇಗಾಲ ಕಡೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.