ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಬಗ್ಗೆ ಪ್ರತಿ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ಥರಿಗೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ದೌರ್ಜನ್ಯ ಪ್ರತಿಬಂಧ ಅಧಿನಿಯಮ, ಅಸ್ಪೃಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಜಿಲ್ಲಾ ಮಟ್ಟದಲ್ಲಿ ಸೇರಿದಂತೆ ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸುವ ಮೂಲಕ ಜಾಗೃತಿ ಮೂಡಿಸಬೇಕು. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಮಾಹಿತಿಯನ್ನೊಳಗೊಂಡ ಫಲಕವನ್ನು 10 ದಿನಗಳೊಳಗಾಗಿ ಅಳವಡಿಸಬೇಕು ಎಂದು ಹೇಳಿದರು. ಬ್ಯಾಂಕಿನ ಮೂಲಕ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ ಅರ್ಹರಿಗೆ ವಿಳಂಬ ಮಾಡದೇ ಸಾಲ-ಸೌಲಭ್ಯ ನೀಡುವ ಮೂಲಕ ಅರ್ಥಿಕವಾಗಿ ಸದೃಡಗೊಳಿಸಲು ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಎಸ್ಸಿ-ಎಸ್ಟಿ ಜನಾಂಗದ ಆರ್ಥಿಕ ಮಟ್ಟ ಸುಧಾರಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಎಲ್ಲ ಇಲಾಖೆಗಳಲ್ಲಿ ಎಸ್ಸಿಪಿ-ಟಿಎಸ್‌ಪಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸರ್ಕಾರದ ಸೌಲಭ್ಯ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಅಂಗನವಾಡಿಯಲ್ಲಿ ಕಟ್ಟಡ, ಅಂಗನವಾಡಿಯಲ್ಲಿ ನೇಮಕಾತಿ, ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸುವುದು, ರಸ್ತೆ ಅತಿಕ್ರಮಣ ತೆರವು, ಪರಿಶಿಷ್ಟ ಜಾತಿ, ಪಂಗಡದ ನೌಕರರ ಮುಂಬಡ್ತಿ, ಸಮುದಾಯ ಭವನ ನಿರ್ಮಾಣ, ವಿದ್ಯುತ್ ಸಂಪರ್ಕ, ಭೂ ಒಡೆತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದಾಗ ಈ ಕುರಿತು ಜಿಲ್ಲಾಧಿಕಾರಿಗಳು, ಅತ್ಯಂತ ತ್ವರಿತವಾಗಿ ಈ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‌ಕುಮಾರ ಗುಣಾರಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರುಗಳಾದ ಮದನಕುಮಾರ ನಾಗರದಿನ್ನಿ, ನಿರ್ಮಲಾ ಹೊಸಮನಿ, ಸಿದ್ದು ರಾಯಣ್ಣವರ, ಬಂದಗಿ ಸಿದ್ದಪ್ಪ ಗಸ್ತಿ, ಯಮನಪ್ಪ ಸಿದರಡ್ಡಿ, ಮಹಾಂತೇಶ ಸಾಸಬಾಳ, ಮಲ್ಲು ತಳವಾರ, ರಾಜಶೇಖರ ಚೌರ, ರವಿಕಾಂತ ಬಿರಾದಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.