ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ನಂತರ ವಿಧ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿದರು, ವಿದ್ಯಾರ್ಥಿಗಳ ಪರಿಶ್ರಮ, ಶ್ರದ್ಧೆ ಮತ್ತು ನಿಷ್ಠೆಯೇ ಈ ಸಾಧನೆಗೆ ಮೂಲ ಕಾರಣವಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಬೆಂಬಲವೂ ಅವರ ಯಶಸ್ಸಿಗೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.
ಎಸ್.ಎಸ್.ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಾನಿಕ ಮಟಗಾರ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಯಶಸ್ವಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಚವ್ಹಾಣ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬರಡೋಲ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಲಕ್ಷ್ಮಿ ನಂದೂರ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಎಸ್.ಎಸ್.ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಯುವರಾಜ ಬಾಗಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಇವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಡಾ.ಆಂನದ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪಿಯು ಡಿಡಿ ಸಿ.ಕೆ.ಹೊಸಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.




