ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.
ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬಂಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು. ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದರ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.