ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಬಾಗೇಪಲ್ಲಿಯ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಅಫಿಡವಿಟ್ ಸಲ್ಲಿಸಲು 6 ವಾರಗಳ ಕಾಲಾವಕಾಶವನ್ನು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ನನ್ನನ್ನು ವಿಜೇತ ಅಭ್ಯರ್ಥಿ ಅಂತಾ ಘೋಸಬೇಕು ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಸಲ್ಲಿಸಿದ್ದ ಚುನಾವಣೆ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿ ಫೆಬ್ರವರಿ 16ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಎಸ್.ಎನ್ ಸುಬ್ಬಾರೆಡ್ಡಿ ಕಾಂಗ್ರೆಸ್ ನಿಂದ, ಸಿ.ಮುನಿರಾಜು ಬಿಜೆಪಿಯಿಂದ ಸ್ಪರ್ಧಿಸಿದ್ದರು. ಸುಬ್ಬಾರೆಡ್ಡಿ 82,128 ಮತಗಳನ್ನು ಪಡೆದಿದ್ದರು. ಸಿ.ಮುನಿರಾಜು 62,949 ಮತಗಳನ್ನು ಪಡೆದಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸುಬ್ಬಾರೆಡ್ಡಿ ಆಯ್ಕೆ ಪ್ರಶ್ನಿಸಿ ಜೂನ್ 24, 2023ರಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ್ದು, ಎಸ್.ಎನ್ ಸುಬ್ಬಾರೆಡ್ಡಿಗೆ ನಿರಾಳ ತಂದಿದೆ.




