ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಇಲ್ಲಿನ ಸುವರ್ಣಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಬುಧವಾರ ಕಾಂಗ್ರೆಸ್ ನಾಯಕರು ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎನ್ ಡಿಎ ಹಾಗೂ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬಿಜೆಪಿ ಸೇಡಿನ ರಾಜಕಾರಣ ನ್ಯಾಯಾಲಯದ ಮುಂದೆ ಸೋತಿದೆ. ಹೀಗಾಗಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಅಪರಾಧಿಗಳೆಂದು ಬಿಂಬಿಸುವುದು, ಕಪೋಕಲ್ಪಿತ ಪ್ರಕರಣಗಳ ಮೂಲಕ ನ್ಯಾಯಾಲಕ್ಕೆ ಎಳೆಯುವ ಕೆಲಸ ಮಾಡುತ್ತಿದೆ. ಈ ಮೂಲಕ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ತನಿಖಾ ಸಂಸ್ಥೆಗಳನ್ನು ಅಸ್ತ್ರ ಮಾಡಿಕೊಂಡಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಹಣದುಬ್ಬರ ಗಗನಕ್ಕೆ ಏರಿಕೆಯಾಗಿದೆ. ಅನಿಯಂತ್ರಿತ ತೆರಿಗೆಗಳಿಂದ ದೇಶವನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ದೇಶದ ಸಾಲದ 53.11 ಲಕ್ಷ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ಮೇಳೆ 200 ಲಕ್ಷ ಕೋಟಿ ದಾಟಿದೆ. 11 ವರ್ಷದಲ್ಲಿ ಸುಮಾರು 148 ಲಕ್ಷ ಕೋಟಿ ಹೆಚ್ಚಾಗಿದೆ ಎಂದು ಕಿಡಿ ಕಾರಿದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಸತ್ಯ, ಸಂವಿಧಾನದ ಮೌಲ್ಯ ಹಾಗೂ ಪ್ರಜಾಪ್ರಭುತ್ವ ರಕ್ಷಣೆಯಲ್ಲಿ ಕಾಂಗ್ರೆಸ್ ಒಟ್ಟಾಗಿ ನಿಂತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಾವು ಇಂದು ಒಗ್ಗಟ್ಟಿನ ಧ್ವನಿ ಎತ್ತಲು ಮತ್ತು ನ್ಯಾಯ ಮತ್ತು ಕಾನೂನಿನ ಆಡಳಿತಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಒಟ್ಟುಗೂಡಿದ್ದೇವೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ವಜಾಗೊಳಿಸುವಿಕೆ ಬಿಜೆಪಿ ಸೇಡಿನ ರಾಜಕಾರಣ ಹಾಗೂ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರುಪಯೋಗ ಬಹಿರಂಗ ಪಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.




