ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕೇಂದ್ರದ ಬೆಲೆ ಏರಿಕೆ ಖಂಡಿಸಿ ಸೋಮವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಇದಕ್ಕೆ ತುಂಬಾ ಖಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ-ಆರ್ ಎಸ್ಎಸ್ ಗೊಡ್ಡು ಬೆದರಿಕೆಗೆ ನಾವು ಬಗ್ಗಲ್ಲ, ಜಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗೆ ಇದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ವಾಗ್ದಾಳಿ ನಡೆಸಿದರು.
ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ? ನಮ್ಮ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ದುಷ್ಟರಿಗೆ ದೇಶಪ್ರೇಮ ಇಲ್ಲವೇ? ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ ಆರ್ ಎಸ್ಎಸ್ ಕೇಂದ್ರ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ. ಇದಕ್ಕೆ ನಾಚಿಕೆ ಆಗುವುದಿಲ್ಲವೇ ನಿಮಗೆ? ಯಾವತ್ತಾದರೂ ಆರ್ ಎಸ್ಎಸ್ ಕಚೇರಿ ಮುಂದೆ ಹೋಗಿ ಪ್ರತಿಭಟಿಸಿದ್ದೀರ ಎಂದು ಪ್ರಶ್ನಿಸಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದ್ದಾರೆ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ. ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ? ಭಾರತೀಯರನ್ನು ಇನ್ನೂ ಎಷ್ಟು ವರ್ಷ ಸುಳ್ಳು ಹೇಳಿ ಮರಳು ಮಾಡ್ತೀರಿ. ಸತ್ಯ ಹೇಳಿ. ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ? ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾದ್ರೋಹ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್.ಕೆ ಪಾಟೀಲ, ಕೆ.ಹೆಚ್.ಮುನಿಯಪ್ಪ, ಶಾಸಕ ಲಕ್ಷ್ಮಣ ಸವದಿ, ಪರಿಷತ್ ಸದಸ್ಯ ಸಲೀಂ ಅಹ್ಮದ್ ಸೇರಿದಂತೆ ಅನೇಕರು ನಾಯಕರು ಉಪಸ್ಥಿತರಿದ್ದರು.