ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. ರಾಜಕೀಯ ಮೇಲಾಟಗಳಿಗೂ ಕಾರಣವಾಗಿತ್ತು. ಈ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸೋಮವಾರ ಕೋರ್ಟ್ ಗೆ ಸಲ್ಲಿಸಿದೆ. ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್, ಮಾಜ್ ಮುನೀರ್ ಅಹ್ಮದ್, ಅಬ್ದುಲ್ ಮಥೀನ್ ಅಹಮದ್ ತಾಹಾ ಹಾಗೂ ಮುಝಮ್ಮಿಲ್ ಷರೀಫ್ ಎನ್ನುವ ನಾಲ್ವರ ವಿರುದ್ಧ ಎನ್ಐಎ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಇವರೆಲ್ಲರ ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಸ್ಫೋಟಕ ವಸ್ತುಗಲ ಕಾಯ್ದೆಗೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಈಗಾಗ್ಲೇ ಈ ನಾಲ್ವರನ್ನು ಬಂಧಿಸಲಾಗಿದೆ. ಇವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 1, 2024ರಂದು ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ ಸುಮಾರು 12.55ಕ್ಕೆ ಸ್ಫೋಟ ಸಂಭವಿಸಿದೆ. ಇದರಲ್ಲಿ ಕೆಲವರು ಗಾಯಗೊಂಡಿದ್ದರು.