ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಬುಧವಾರ ರಾತ್ರಿ ಸುಮಾರು 11.30 ಗಂಟೆಗೆ ಮುಂಬೈನಲ್ಲಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ(Ratan Tata) ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ದೇಶದ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ್ದು, ದೇಶದ ಹೆಮ್ಮೆಯ ಉದ್ಯಮಿ. ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.
ಇನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಹ ಸಂತಾಪ ಸೂಚಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮುಂಜಾನೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ದಕ್ಷಿಣ ಮುಂಬೈನ ರಾಷ್ಟ್ರೀಯ ಲಲಿತ ಕಲಾ ಕೇಂದ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಯಾವುದೇ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.