ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಿರಿಯ ವಿದ್ವಾಂಸ, ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ(Muzaffar Assadi) ಅವರು ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ. ಬಹುಅಂಗಾಗ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಚಿಕಿತ್ಸೆ ಫಲಿಸದೆ ರಾತ್ರಿ ಸುಮಾರು 12.45ಕ್ಕೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ ಎಂದು ಸಿಎಂ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ ಎನ್ನುವ ಊರಲ್ಲಿ ಜನಿಸಿದವರು. ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ರಾಜ್ಯಶಾಸ್ತ್ರ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಮೈಸೂರು, ಮಂಗಳೂರು, ಗೋವಾ ವಿವಿಗಳಲ್ಲಿ ಕೆಲಸ ಮಾಡಿದ್ದಾರೆ. ದೇಶ, ವಿದೇಶಗಳಲ್ಲಿ 500ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕನ್ನಡ, ಇಂಗ್ಲಿಷ್ ನಲ್ಲಿ 14 ಪುಸ್ತಕಗಳನ್ನು ಬರೆದಿದ್ದಾರೆ. ಮರಾಠಿ, ತಮಿಳು, ಉರ್ದು, ಫ್ರೆಂಚ್ ಭಾಷೆಗೆ ಅನುವಾದಗೊಂಡಿವೆ. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುಸ್ತಕ ಬಹುಮಾನ ಸೇರಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.