ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾರಕ್ಕೆ ದೊಡ್ಡ ಟೆನ್ಷನ್ ತಂದಿದೆ. ಏನೋ ಮಾಡಲು ಹೋಗಿ ಏನೋ ಮಾಡಿಕೊಂಡಂತೆ ಆಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಇದರಿಂದ ದೊಡ್ಡ ಪೆಟ್ಟು ಬಿದ್ದಿದೆ. ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಹೈಕಮಾಂಡ್ ಸಚಿವ ಸಂಪುಟ ಪುನರ್ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಜಿ.ಪರಮೇಶ್ವರ್ ಅವರಿಂದ ಗೃಹ ಖಾತೆ ಸರಿಯಾಗಿ ನಿಭಾಯಿಸಲು ಆಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು, ಅವರ ಬದಲಾವಣೆ ಆಗಲಿದೆಯಂತೆ. ಅಲ್ಲದೆ ಇನ್ನು ಹಲವು ಸಚಿವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಬೇರೆಯವರಿಗೆ ಅವಕಾಶ ನೀಡುವ ಚಿಂತನೆ ನಡೆದಿದೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಿನಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಭಾರಿ ಇಕ್ಕಟ್ಟಿಗೆ ಸಿಲುಕಿಸಿದೆ.