ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಒಂದು ದೇಶ ಒಂದು (One Nation One Election) ಚುನಾವಣೆ ವರದಿಗೆ ಕೇಂದ್ರ ಸಚಿವ ಸಂಪಟದಲ್ಲಿ ಅನುಮೋದನೆ ಸಿಕ್ಕಿದೆ. ಇದಕ್ಕೆ ವಿರೋಧ ಪಕ್ಷಗಳು ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದು, ಒಂದು ದೇಶ ಒಂದು ಚುನಾವಣೆ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು. ಇಂತಹದೊಂದು ಮಹತ್ವದ ಪ್ರಸ್ತಾವನೆ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನು ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದಿದ್ದಾರೆ.
ಒಂದು ದೇಶ ಒಂದು ಚುನಾವಣೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತರೂಢ ಪಕ್ಷ ವಿಶ್ವಾಸಮತ ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರವಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆವೊಂದು ಯೋಗ್ಯ ಪರಿಹಾರವಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿಗೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ನಡೆಸುವ ಶಕ್ತಿ, ಸಾಮರ್ಥ್ಯ ನಮ್ಮ ಈಗಿನ ಚುನಾವಣೆ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣೆ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದಿದ್ದಾರೆ.