ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅಕ್ಟೋಬರ್ 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ(Caste Census Report)ವರದಿಯ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2015ರಲ್ಲಿ ನಡೆಸಿದೆ. ಅದರ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.
ವಿಧಾನಸೌಧದಲ್ಲಿನ ಸಮಿತಿ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಮುಖಂಡರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಅಕ್ಟೋಬರ್ 10ರಂದು ನಡೆಯುವ ಸಚಿವ ಸಂಪುಟ(Cabinet Meeting) ಸಭೆಗೆ ವರದಿ ತರುವುದಿಲ್ಲ. ಅಕ್ಟೋಬರ್ 18ರಂದ ನಡೆಯುವ ಸಚಿವ ಸಂಪುಟ ಸಭೆಗೆ ತರುತ್ತೇನೆ. ಸಂಪುಟದ ನಿರ್ಣಯದ ಪ್ರಕಾರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಅಂತಾ ಹೇಳಿದರು.