ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮುಡಾದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಅಧಿಕಾರಿಗಳಿಂದ ವಿಚಾರಣೆ ಎದುರಿಸಿದರು. ಸುಮಾರು 2 ಗಂಟೆಗಳ ಕಾಲ ಮುಖ್ಯಮಂತ್ರಿಯವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ವಿಚಾರಣೆ ಎದುರಿಸಿ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ನನ್ನ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದರು.
ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೆ ವಿಚಾರಣೆಗೆ ಬರಬೇಕೆಂದು ಹೇಳಿಲ್ಲ ಎಂದರು. ಬಿಜೆಪಿಯವರು ಈ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರಾ? ಸಿಬಿಐ ಯಾರ ಕೈಯಲ್ಲಿದೆ. ಬಿಜೆಪಿ, ಜೆಡಿಎಸ್ ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಕಾನೂನು ಪ್ರಕಾರ ಸೈಟ್ ಪಡೆದಿದ್ದೇನೆ ಎಂದರು. ಲೋಕಾಯುಕ್ತ ಕಚೇರಿಗೆ ಸಿಎಂ ಬರುತ್ತಿದ್ದಂತೆ ಬಿಜೆಪಿಯವರು ಪ್ರತಿಭಟನೆ ನಡೆಸಿ ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿದರು.