ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ(Thawar Chand Gehlot) ತನಿಖೆಯ ಅನುಮತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿಯಲ್ಲಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆಗೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಹೋರಾಟದ ರೂಪುರೇಷ ನಿರ್ಧರಿಸುತ್ತೇನೆ. ಇದು ನರೇಂದ್ರ ಮೋದಿ(Modi) ನೇತೃತ್ವದ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟ. ನಮ್ಮ ಶಾಸಕರು, ನಾಯಕರು, ಕಾರ್ಯಕರ್ತರು, ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ. ಈ ಕಾರಣಕ್ಕೆ ಬಿಜೆಪಿ, ಜೆಡಿಎಸ್ ನನ್ನ ವಿರುದ್ಧ ರಾಜಕೀಯ ಪ್ರತೀಕಾರಕ್ಕೆ ಇಳಿದಿದೆ.
40 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಸೇಡು, ಸಂಚಿನ ರಾಜಕೀಯ ಎದುರಿಸಿದ್ದೇನೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾದ ನಮ್ಮ ಯೋಜನೆಗಳನ್ನು ನಿಲ್ಲಿಸಬೇಕು ಎನ್ನುವುದೇ ಬಿಜೆಪಿ, ಜೆಡಿಎಸ್(BJP-JDS) ಪಕ್ಷಗಳ ಮುಖ್ಯ ಉದ್ದೇಶ. ಆದರೆ, ಜನರ ಆಶೀರ್ವಾದ, ಹಾರೈಕೆ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ ಅಂತಾ ಹೇಳಿದರು.