ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದಿದ್ದಾರೆ.
ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
ಘಟನೆ ಹಿನ್ನಲೆ ಏನು?: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣ ಗುರುವಾರ ನಡೆದಿದೆ. ಅಡುಗೆ ಸಿಬ್ಬಂದಿ ಮಕ್ಕಳಿಗೆ ಹಾಲು ನೀಡುವ ಸಲುವಾಗಿ ಬಿಸಿಯೂಟದ ಸಿಬ್ಬಂದಿ ಟ್ಯಾಂಕಿನ ನೀರಿನಲ್ಲಿ ಕೈ ತೊಳೆದುಕೊಳ್ಳಲು ಹೋದಾಗ ನೀರಿನ ಬಣ್ಣ ಬದಲಾಗಿರುವುದು ಕಂಡು ಬಂದಿದೆ. ವಾಸನೆ ನೋಡಿದಾಗ ಕೀಟನಾಶಕ ಬೆರಸಿರುವ ವಾಸನೆ ಬಂದಿದೆ. ಕೂಡಲೇ ಶಾಲೆಯ ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದಾರೆ. ಅವರು ಗ್ರಾಮ ಪಂಚಾಯ್ತಿ ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನೀರು ಪರೀಕ್ಷೆ ನಡೆಸಿದಾಗ ಕೀಟನಾಶಕ ಬೆರಸಿರುವುದು ಪತ್ತೆಯಾಗಿದೆ. 18 ಮಕ್ಕಳ ಆರೋಗ್ಯ ತಪಾಸಣೆ ನಡೆಸಿದಾಗ ಆರೋಗ್ಯವಾಗಿದ್ದಾರೆ ಎಂದು ತಿಳಿದಿದೆ. ಆಗ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.