ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಆಲಮಟ್ಟಿ ಜಲಾಶಯ ಎತ್ತರದಿಂದ ಬಾಧಿತವಾಗುವ ಪ್ರದೇಶದಲ್ಲಿ ಪುನರ್‌ವಸತಿ, ಪುನರ್‌ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಿದ್ಧವಿದ್ದು, ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ಬುಧವಾರ ಜಿಲ್ಲೆಯ ಆಲಮಟ್ಟಿ(Alamatti) ಆಣೆಕಟ್ಟೆಯಲ್ಲಿ ಕೃಷ್ಣೆಯ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ 2ನೇ ತೀರ್ಪು ಬಂದಿದ್ದು, ತೀರ್ಪಿನನ್ವಯ ಆಲಮಟ್ಟಿ ಎತ್ತರ ಹೆಚ್ಚಳದಿಂದಾಗಿ 130 ಟಿಎಂಸಿ(TMC) ನೀರು ಹೆಚ್ಚುವರಿಯಾಗಿ ದೊರೆಯಲಿದೆ. 130 ಟಿಎಂಸಿ ನೀರನ್ನು ಬಳಕೆ ಮಾಡಲು ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದರೆ ಮಾತ್ರ ಆಲಮಟ್ಟಿ ಎತ್ತರ ಹೆಚ್ಚಿಸಲು ಸಾಧ್ಯವಾಗುತ್ತದೆ. 519.6 ರಿಂದ 524.256 ಮೀಟರ್ ಎತ್ತರಿಸಿದಾಗ ಮಾತ್ರ 130 ಟಿಎಂಸಿ ನೀರು ದೊರೆಯಲಿದೆ. ಆಲಮಟ್ಟಿ ಎತ್ತರ ಹೆಚ್ಚಳದಿಂದ 14.68 ಲಕ್ಷ ಎಕರೆ ಜಮೀನು ನೀರಾವರಿಗೊಳಪಟ್ಟು ರೈತರಿಗೆ ಅನುಕೂಲವಾಗಲಿರುವುದರಿಂದ ಶೀಘ್ರವೇ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಪುನರ್‌ವಸತಿ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸಿದ್ಧವಿದ್ದು, ಈ ಹಿಂದೆ 52 ಸಾವಿರ ಕೋಟಿ ರೂಪಾಯಿ ಪುನರ್‌ವಸತಿ ಹಾಗೂ ಪುನರ್ ನಿರ್ಮಾಣಕ್ಕಾಗಿ ಲೆಕ್ಕಾಚಾರ ಮಾಡಲಾಗಿತ್ತು. ಪ್ರಸ್ತುತ 82 ಸಾವಿರಕ್ಕೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ನೀರಾವರಿಗಾಗಿ 5 ವರ್ಷದಲ್ಲಿ 1 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುವ ಉದ್ದೇಶ ಹೊಂದಿರುವುದರಿಂದ ಅಧಿಸೂಚನೆ ಹೊರಡಿಸುವುದು ಅತ್ಯವಶ್ಯಕವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಆಲಮಟ್ಟಿ ಆಣೆಕಟ್ಟು ಎತ್ತರಕ್ಕೆ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗುವುದು. ಇದರಿಂದ ಹೆಚ್ಚಿನ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿಗಳಾದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ ಎಂದು ಹೇಳಿದರು. ಸಮಿತಿಯ ವರದಿಯ ಆಧಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ ಎಂದು ತಿಳಿಸಿದರು.
ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಹೇಳಿದರು. ಆಲಮಟ್ಟಿ ಆಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಈ ವೇಳೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ ಮಾರ್ಜಕ್ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಪ್ರಕಾಶ ರಾಠೋಡ ಸೇರಿದಂತೆ ಉಭಯ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.