ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕಿತ್ತೂರ ಚೆನ್ನಮ್ಮ ಮೂರ್ತಿ ಉದ್ಘಾಟನೆ ಹಾಗೂ ಬಸ್ ನಿಲ್ದಾಣಕ್ಕೆ ನಾಮಕಾರಣ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನವರಿ 9ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಕಾರ್ಯಕ್ರಮವನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ನಂತರ ನಗರದ ದರಬಾರ್ ಶಾಲಾ ಮೈದಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಣೆ ಕೈಗೊಳ್ಳಬೇಕು. ವೇದಿಕೆ, ಶಾಮಿಯಾನಾ, ಆಸನ ವ್ಯವಸ್ಥೆ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯವರು ಮುಂಜಾಗ್ರತಾ ಕ್ರಮವಾಗಿ ವೈದ್ಯರನ್ನು ಹಾಗೂ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ವಾಹನ ಸೇರಿದಂತೆ ಸಂಬಂಧಿಸಿದ ವ್ಯವಸ್ಥೆಯನ್ನು ನೋಡಿಕೊಳ್ಳಬೇಕು. ಅಧಿಕಾರಿಗಳಿಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಕಾರ್ಯಕ್ರಮದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮವಹಿಸಿದೆ ಎಂದು ತಿಳಿಸಿದರು. ಸಭೆಗೂ ಮೊದಲು ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೇಂದ್ರ ಬಸ್ ನಿಲ್ದಾಣ ಹಾಗೂ ವೇಲೋಡ್ರಮ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




