ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದಿದ್ದಾರೆ.
ಬಿಜೆಪಿ, ಜೆಡಿಎಸ್(BJP-JDS) ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣಗಳಿಲ್ಲ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳವ ಯಾವುದೇ ನೈತಿಕತೆ ಇಲ್ಲ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ(HDK) ಕುಮಾರಸ್ವಾಮಿ, ಮುರುಗೇಶ್(Nirani) ನಿರಾಣಿ, ಶಶಿಕಲಾ ಜೊಲ್ಲೆ, ಜರ್ನಾಧನ್ ರೆಡ್ಡಿ ವಿರುದ್ಧ ದೂರು ನೀಡಲಾಗಿದ್ದರೂ ಇದುವರೆಗೂ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕ ಪರವಾನಿಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕಾನೂನು ಕ್ರಮವಾಗಿಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರೆಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಬಿಜೆಪಿಯವರ ಈ ನಿಲುವಿಗೆ ಜೆಡಿಎಸ್ ನವರು ಈಗ ಬೆಂಬಲ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.