Ad imageAd image

ಭಾರತ-ಪಾಕ್ ಕದನ, ವದಂತಿಗಳಿಗೆ ಕಿವಿಗೊಡದಂತೆ ಡಿಸಿ ಮನವಿ

Nagesh Talawar
ಭಾರತ-ಪಾಕ್ ಕದನ, ವದಂತಿಗಳಿಗೆ ಕಿವಿಗೊಡದಂತೆ ಡಿಸಿ ಮನವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪಾಕ್-ಭಾರತ ಮಧ್ಯೆ ಉದ್ಭವಿಸಿರುವ ಉದ್ವಿಗ್ನದಂತಹ ಪರಿಸ್ಥಿತಿಯ ಸಂದರ್ಭದಲ್ಲಿ  ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಯುದ್ಧದಂತಹ ಸನ್ನಿವೇಶ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ, ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು  ಸೂಕ್ತ ತಿಳುವಳಿಕೆ ಹೊಂದುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ.

ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಸೂಚನೆ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಿ, ಅಗತ್ಯ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ  ಶಾಂತಿ ಸುವ್ಯವಸ್ಥೆ, ಸಾರ್ವಜನಿಕರಿಗೆ ಸುಗಮ ಆರೋಗ್ಯ ವ್ಯವಸ್ಥೆ ದೊರಕಿಸುವುದು, ಆಹಾರ ಉತ್ಪನ್ನಗಳ ಕೃತಕ ಅಭಾವ ಸೃಷ್ಟಿಯಾಗದಂತೆ ಮುಂಜಾಗ್ರತೆ ವಹಿಸುವುದು ಸೇರಿದಂತೆ ಸಾರ್ವಜನಿಕರ ರಕ್ಷಣಾ ಚಟುವಟಿಕೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಾರ್ವಜನಿಕರು ಸಹ ಯಾವುದೇ ಸುಳ್ಳು ಸುದ್ದಿಗಳು ಸೇರಿದಂತೆ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿಕೊಂಡ ಅವರು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅನುಮಾನ, ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು 1077 ಸಹಾಯವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಸೂಕ್ತ ರಕ್ಷಣಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಅಗತ್ಯವಿರುವ ಕಡೆ ಹೆಚ್ಚಿನ ಭದ್ರತೆಗೆ ಕ್ರಮ ವಹಿಸಲಾಗಿದೆ. ವಿವಿಧೆಡೆ ಅಣುಕು ಪ್ರದರ್ಶನಗಳನ್ನು ಏರ್ಪಡಿಸಿ ಯುದ್ಧದ ಸನ್ನಿವೇಶಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಸಹ ಮೂಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಪೊಲೀಸ್ ಇಲಾಖೆ ವತಿಯಿಂದ ತೀವ್ರ ನಿಗಾ ಇರಿಸಲಾಗಿದ್ದು, ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿಗಳಾಗಲಿ, ಕೋಮು-ಸೌಹಾರ್ದತೆ ಹಾಗೂ ಶಾಂತಿ ಸುವ್ಯವಸ್ಥೆ ಧಕ್ಕೆ ತರುವ ಸುದ್ದಿಗಳನ್ನು ಹರಿಬಿಟ್ಟಲ್ಲಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article