ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು ಸಹ ಆಗಿ ಐದು ವರ್ಷ ಪೂರ್ಣಗೊಳಿಸಿದ್ದಾರೆ. ಈ ಸ್ಥಾನವನ್ನು ಬೇರೆಯವರಿಗೆ ಕೊಡಬೇಕು ಎನ್ನುವ ಕೂಗು ಪಕ್ಷದೊಳಗೆ ಹಲವು ತಿಂಗಳುಗಳಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಮಾತನಾಡಿರುವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ, ಮುಂಜೂಣಿ ಘಟಕ, ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಈ ರೀತಿ ಹೇಳಿದ್ದಾರೆ.
ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲೆಯಲ್ಲಿ ಎರಡು ಹುದ್ದೆಗಳ ಬಗ್ಗೆ ಮಾತನಾಡಿದರು. ತಕ್ಷಣ ಡಿ.ಕೆ ಶಿವಕುಮಾರ್ ಮಾತನಾಡಿ, ನೋಡ್ರಪ್ಪ ಸಮಯ, ಸಂದರ್ಭ ನೋಡಿಕೊಂಡು ನಮ್ಮ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭಾ ಸದಸ್ಯರು. ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ, ಎರಡು ಖಾತೆ ಸಹ ನಿರ್ವಹಿಸುತ್ತಿದ್ದೇನೆ. 100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಬಳಿಕ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ. ಬೇರೆಯವರು ಜವಾಬ್ದಾರಿ ವಹಿಸಿಕೊಳ್ಳಲಿ ಎನ್ನುವ ಮೂಲಕ ತಮ್ಮ ವಿರೋಧಿ ಬಣಕ್ಕೆ ಉತ್ತರ ಕೊಟ್ಟಿದ್ದಾರೆ.