ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಆರ್ ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಗಾಯಾಳುಗಳನ್ನು ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಹೊಣೆಯನ್ನು ಸರ್ಕಾರಿ ಹೊತ್ತುಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದಿಂದ ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಅನಿರೀಕ್ಷಿತ ಘಟನೆಗಳು ಯಾವುದೇ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ನಡೆದಿದೆ. ಯಾರೂ ಇದನ್ನು ನಿರೀಕ್ಷಿರಲಿಲ್ಲ. ಸ್ಟೇಡಿಯಂ 35 ಸಾವಿರ ಜನರು ಕುಳಿತುಕೊಳ್ಳುವ ಆಸನವಿದೆ. ಆದರೆ, 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಅಸೋಷಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಸರ್ಕಾರ ಭದ್ರತೆ ಒದಗಿಸುವ ಕೆಲಸ ಮಾಡುತ್ತದೆಯಷ್ಟೇ ಎಂದಿದ್ದಾರೆ. ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇನ್ನು ಈ ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಇದು ತುಂಬಾ ನೋವಿನ ಸಂಗತಿ. ಈ ದುರಂತದ ಹೊತ್ತಿನಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.