ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಹಾದಿಬೀದಿಯಲ್ಲಿ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಇದು ಬಿಜೆಪಿ ಹೈಕಮಾಂಡ್ ಅಂಗಳಕ್ಕೂ ಹೋಗಿದೆ. ಹೀಗಾಗಿ ಈ ಡ್ಯಾಮೇಜ್ ಕಂಟ್ರೋಲ್ ಮಾಡಲು ಏನು ಮಾಡಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದೆ.
ಈ ವೇಳೆ ಬಸನಗೌಡ ಪಾಟೀಲ ಯತ್ನಾಳ, ಶಿವರಾಮ್ ಹೆಬ್ಬಾರ್, ಎಸ್.ಟಿ ಸೋಮಶೇಖರ್ ಅವರ ಹೆಸರು ಪ್ರಸ್ತಾಪವಾಗಿದೆ ಎನ್ನಲಾಗುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಭೆಯಲ್ಲಿ ಹಾಜರಿದ್ದ ನಾಯಕರು ಹೇಳಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ, ನಮ್ಮಲ್ಲಿ ಯಾವುದೇ ಬಣವಿಲ್ಲ. ಸಭೆ ಮಾಡುವುದು ವರಿಷ್ಠರ ಸೂಚನೆಯಾಗಿದೆ. ಹೀಗಾಗಿ ಮಾಡಿದ್ದೇವೆ. ಬೆಳಗಾವಿ ಅಧಿವೇಶನದ ವೇಳೆ ಒಟ್ಟಾಗಿ ಹೋರಾಟ ಮಾಡುವುದು ನಮ್ಮ ಉದ್ದೇಶವಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಡಬೇಕಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
ವಿ.ಸೋಮಣ್ಣ ಏನೇ ಹೇಳಿದರೂ ಜನರು ನಂಬಲ್ಲ. ಯಾಕಂದರೆ, ಯತ್ನಾಳ, ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ, ಜಿ.ಎಂ ಸಿದ್ದೇಶ್ವರ್, ಕುಮಾರ ಬಂಗಾರಪ್ಪ, ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಅದಾಗಲೇ ಬಂಡಾಯವೆದ್ದು ಬಹಳ ದಿನಗಳಾಗಿವೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಮಾಡಬೇಕು ಎನ್ನುವ ಪಟ್ಟು ಮುಂದುವರೆದಿದೆ. ಹೀಗಿರುವಾಗ ನಮ್ಮಲ್ಲಿ ಬಣವಲ್ಲ. ಒಟ್ಟಾಗಿ ಹೋಗುತ್ತೇವೆ ಎನ್ನುವುದು ಸಧ್ಯಕ್ಕೆ ನಂಬದ ಮಾತು.