ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸೌಲಭ್ಯಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ, ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರ ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ, ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ವಿವಿಧ ಯೋಜನೆಗಳನ್ನು ರೂಪಿಸುತ್ತದೆ. ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯ ದೊರಕಿಸುವ ಅತ್ಯಂತ ಮಹತ್ತರವಾದ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ. ತನ್ನ ಜವಾಬ್ದಾರಿಯನ್ನಿರಿತು ಇರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಸರ್ಕಾರಿ ನೌಕರರ ಕೊಡುಗೆ ಅಪಾರವಾಗಿದ ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಪ್ರತಿ ವರ್ಷ ಏಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಸರ್ಕಾರಿ ಅಧಿಕಾರಿ-ನೌಕರರ ಗುರುತಿಸಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 31 ಜನರನ್ನು ಆಯ್ಕೆ ಮಾಡಲಾಗಿದೆ. 2023, 2024 ಹಾಗೂ 2025ನೇ ಸಾಲಿನಲ್ಲಿ ತಲಾ 10 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ 2023ನೇ ಸಾಲಿಗೆ ಜಿಲ್ಲಾ ಸವೋತ್ತಮ ಪ್ರಶಸ್ತಿಗೆ ಆಯ್ಕೆಯಾದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿದ್ರಾಮ ಮಾರಿಹಾಳ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ಧರಾಮಯ್ಯ ಬರಗಿಮಠ, ಜಿಲ್ಲಾಧಿಕಾರಿಗಳ ಕಚೇರಿಯ ಎನ್‌ಎಸ್‌ಎಪಿ ಸಹಾಯಕ ನಿರ್ದೇಶಕರಾದ ಜ್ಯೋತಿ ರಾಮಚಂದ್ರ, ಇಂಡಿ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕ ಸಂಜಯ ಖಡಗೇಕರ, ರೇಷ್ಮೆ ಕರಷಿ ವಿಸ್ತರಣಾಧಿಕಾರಿ ಸುರೇಶ ಗೋಲಗೊಂಡ, ಶಿರಸ್ತೇದಾರ ದಯಾನಂದ ಕಟ್ಟಿಮನಿ, ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ ನೂರುಲ್‌ಹಸನ ಶೇಖ, ಜಿ.ಪಂ. ಲೆಕ್ಕ ಅಧೀಕ್ಷಕ ಅನ್ವರಹುಸೇನ ನದಾಫ್, ಜಿ.ಪಂ.ವಾಹನ ಚಾಲಕ ಜಗಯ್ಯ ವ್ಹಿ ಹಿರೇಮಠ ಹಾಗೂ ಗ್ರೂಪ್-ಡಿ ನೌಕರರಾದ ಪ್ರಕಾಶ ಶಿವಪ್ಪ ಟಕ್ಕೆ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಲಾಯಿತು.
2024ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಪ್ರವೀಣಕುಮಾರ ಸುರಪುರ, ಕಾರ್ಯಪಾಲಕ ಅಭಿಯಂತರ ಬಸವರಾಜ ಕುಂಬಾರ, ಶಾಲಾ ಶಿಕ್ಷಣ ಇಲಾಖೆ ಶಾಖಾಧಿಕಾರಿ ಭೀಮರಾವ್ ಗೊಂಗಡಿ, ಕೃಷಿ ಇಲಾಖೆ ಸಹಾಯಕ ಆಡಳಿತ ಅಧಿಕಾರಿ ಕಾಸಿಮಸಾಬ ಮಸಳಿ, ಶಾಲಾ ಶಿಕ್ಷಣ ಇಲಾಖೆ ಲೆಕ್ಕ ಅಧೀಕ್ಷಕ ದಶರಥ ಸಲಗರಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕ ಅಮರೇಶ ತಾಂಡೂರ, ಕಂದಾಯ ನಿರೀಕ್ಷಕ ಆನಂದ ಕುಲಕರ್ಣಿ, ಪೌರ ಕಾರ್ಮಿಕ ದ್ಯಾವಪ್ಪ ಮಾದರ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಲಾಯಿತು.
2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ತಾ.ಪಂ. ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಭೂದಾಖಲೆಗಳ ಸಹಾಯಕ ನಿರ್ದೇಶಕ ಪ್ರಕಾಶ ಯಲ್ಲಪ್ಪ ಕಾಂಬಳೆ, ಗ್ರೇಡ್-2 ತಹಶೀಲ್ದಾರ್ ಈರಪ್ಪ ತುಂಬಗಿ, ನಗರಾಭಿವೃದ್ದಿ ಪ್ರಾಧಿಕಾರದ ಸಹಾಯಕ ನಿರ್ದೇಶಕ ಲಕ್ಷ್ಮಣ ಮಾರುತಿ ಮೋರೆ, ಜಿಲ್ಲಾ ಸಂಖ್ಯಾ ಸಂಗ್ರಹಣಾ ಸಹಾಯಕ ನಿರ್ದೇಶಕ ಅಲ್ತಾಫ ಮಣಿಯಾರ, ಕಿರಿಯ ಅಭಿಯಂತರ ಬಸಲಿಂಗಪ್ಪ ಪಾಲಾಯಿ, ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಬಸವರಾಜ ನಾಟಿಕಾರ, ಅಬ್ದುಲ್ ಕಲಾಂ ವಸತಿ ಶಾಲೆ ವಾರ್ಡನ್ ಆಫ್ರಿನ್ ಮುಲ್ಲಾ ಹಾಗೂ ಗ್ರೂಪ್ ಡಿ ನೌಕರರಾದ ಶ್ರೀಮತಿ ವೀಣಾ ಹೊನಕಟ್ಟಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಲಾಯಿತು.
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸೇರಿದಂತೆ ವಿವಿಧ ಅಧಿಕಾರಿಗಳು, ನೌಕರರು ಉಪಸ್ಥಿತರಿದ್ದರು. ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ ಸ್ವಾಗತಿಸಿದರು. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.