ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಬೋಸ್ಲೆ(92) ಅವರು ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಏಪ್ರಿಲ್ 12ರಂದು ಬ್ರೀಚ್ ಕ್ಯಾಂಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಸ್ತಂಭನದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಅವರ ಆರೋಗ್ಯದಲ್ಲಿ ಗಂಭೀರತೆಯಿದೆ ಎಂದು ವೈದ್ಯರು ಹೇಳಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಇವರ ಮೊಮ್ಮಗಳು ಜನೈ ಬೋಸ್ಲೆ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಕಳೆದ 80 ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿದ್ದಾರೆ. ಭಾರತದ ವಿವಿಧ ಭಾಷೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಈ ವಿಚಾರದಲ್ಲಿ ಗಿನ್ನಿಸ್ ರೆಕಾರ್ಡ್ ಸಹ ಮಾಡಿದ್ದಾರೆ. ಇವರ ಸಂಗೀತ ಸಾಧನೆಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಭಾರತ ಸರ್ಕಾರದ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಮುಡಿಗೇರಿವೆ. ಖ್ಯಾತ ಗಾಯಕಿ ದಿವಂಗತ ಲತಾ ಮಂಗೇಶ್ಕರ್ ಅವರ ಕಿರಿಯ ಸಹೋದರಿಯಾಗಿದ್ದಾರೆ.




