ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಸಮಾಜದಲ್ಲಿ ನಾವೆಲ್ಲರೂ ಸಮಾನರು. ತಾರತಮ್ಯ ಬೇಧಭಾವ ತೊರೆದು ಎಲ್ಲರೂ ಸಮಾನರೆಂದು ನಡೆಯುವ ಮೂಲಕ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಹಾಗೂ ವಿಚಾರ ಸಂಕಿರಣ-2024 ಕಾರ್ಯಕ್ರಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರವರ ಜೀವನದ ಪ್ರಮುಖ ಘಟ್ಟಗಳ ಕುರಿತಾಗಿರುವ ಛಾಯಚಿತ್ರಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ದೇಶದ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಸಂವಿಧಾನದ ಪೀಠಿಕೆಯಲ್ಲಿಯೇ ಸಮಾನತೆ, ಭಾತೃತ್ವ, ಮೂಲಭೂತ ಹಕ್ಕುಗಳು ಹಾಗೂ ನಾಗರಿಕರ ಕರ್ತವ್ಯಗಳು, ಅಸ್ಪಶೃತೆ ನಿವಾರಣೆ, ಜೀವಿಸುವ ಹಕ್ಕು, ಉತ್ತಮ ಜೀವನ ನಿರ್ವಹಣೆ ಕುರಿತ ಅಂಶಗಳನ್ನು ಅಳವಡಿಸಲಾಗಿದೆ. ನಮ್ಮ ಸಂವಿಧಾನ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒದಗಿಸುತ್ತದೆ ಎಂದು ಹೇಳಿದರು.
ಪ್ರಾಧ್ಯಾಪಕ ಹಾಗೂ ಹಿರಿಯ ಸಾಹಿತಿ ಎಚ್.ಟಿ.ಪೋತೆ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸಂವಿಧಾನದಲ್ಲಿ ಒತ್ತು ನೀಡಲಾಗಿದೆ. ಸಂವಿಧಾನದ ಮೂಲಕ ಮತದಾನದ ಹಕ್ಕು ಕಲ್ಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ವಿಧ್ವತ್ತಿನಿಂದ ವಿಶ್ವ ಪ್ರಸಿದ್ಧರಾದರು. ಇವರ ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಜ್ಞಾನಕೇಂದ್ರವಾಗಿರುವ ಅಂಬೇಡ್ಕರ್ ಪುಸ್ತಕದ ದೊಡ್ಡ ಶಕ್ತಿಯಾಗಿದ್ದರು. ಇವರಿಂದ ಪ್ರೇರೆಣೆ ಪಡೆದು, ವಿದ್ಯಾರ್ಥಿಗಳು ಅಧ್ಯಯನಶೀಲತೆಯನ್ನು ರೂಢಿಸಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಎಸ್ಪಿ ಲಕ್ಷ್ಮಣ ನಿಂಬರಗಿ, ಅಭಿಷೇಕ ಚಕ್ರವರ್ತಿ ಅವರು ಮಾತನಾಡಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾಸ್ಪರ್ಧೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಯೋಜಾನಾ ನಿರ್ದೇಶಕ ಬದ್ರುದ್ದಿನ್ ಸೌದಾಗಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಹಾನಗರ ಪಾಲಿಕೆ ಸದಸ್ಯರಾದ ಆರತಿ ಶಹಾಪುರ, ಮಲ್ಲಿಕಾರ್ಜುನ ಬಟಗಿ, ಮಹೇಶ ಕ್ಯಾತನವರ, ಪಾವರ್ತಿ ಕುರ್ಲೆ, ಜಗದೇವ ಸೂರ್ಯವಂಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಸ್ವಾಗತಿಸಿದರು.