ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನೀಡಿರುವ ಪ್ರತಿಭಟನೆ ಕರೆಯಿಂದಾಗಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಮುಖಂಡರು, ಕಾರ್ಯಕರ್ತರು ಅಪಾರ ಪ್ರಮಾಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಮೊಗ್ಗ(Shivamogga) ನಗರದ ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್, ಸೀನಪ್ಪ ಶೆಟ್ಟಿ ಸರ್ಕಲ್ ಮೂಲಕ ಹಾಯ್ದು ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ವೇಳೆ ರಾಜ್ಯಪಾಲರು ತೊಲಗಿ ಎಂದು ಘೋಷಣೆ ಕೂಗಿದರು. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧವೂ ಕಿಡಿ ಕಾರಿದರು. ಕೇಂದ್ರ ಸಚಿವ ಕುಮಾರಸ್ವಾಮಿಯವರ ಮೇಲೆ ಯಾಕೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಡುತ್ತಿಲ್ಲವೆಂದು ಪ್ರಶ್ನಿಸಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಕನ್ನಡಿಗರಿಗೆ ರಾಜ್ಯಪಾಲರು ದ್ರೋಹ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಕೊಪ್ಪಳದ(Koppala) ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಟಯರ್ ಗೆ ಬೆಂಕಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕುಮಾರಸ್ವಾಮಿ ಹಗರಣದ ತನಿಖೆ ಯಾವಾಗ? ಹಿಂದಿನ ಬಿಜೆಪಿ ಸರ್ಕಾರಲ್ಲಿ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆ ವಿರುದ್ಧದ ಮೊಟ್ಟೆ ಹಗರಣದ ತನಿಖೆ ಯಾವಾಗ ಎಂದು ಪ್ರಶ್ನಿಸಿ ಕಿಡಿ ಕಾರಿದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಅನೇಕರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾದ ಮೈಸೂರಿನಲ್ಲಿ(Mysore) ಅಪಾರ ಸಂಖ್ಯೆಯಲ್ಲಿ ಸೇರಿ ಕಾರ್ಯಕರ್ತರು ರಾಜ್ಯಪಾಲರು ಹಾಗೂ ಕೇಂದ್ರದ ಬಿಜೆಪಿ ವಿರುದ್ಧ ಪ್ರತಿಭಟಿಸಿದರು. ಗಾಂಧಿ ಸರ್ಕಲ್ ಬಳಿ ಪ್ರತಿಭಟನಾ ಸಮಾವೇಶ ನಡೆಸಿ ವಾಗ್ದಾಳಿ ನಡೆಸಲಾಯಿತು. 136 ಸ್ಥಾನಗಳೊಂದಿಗೆ ಸ್ಪಷ್ಟಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬಿಜೆಪಿ, ಜೆಡಿಎಸ್(BJP-JDS) ಎಂದೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಚಿವ ಹೆಚ್.ಸಿ ಮಹಾದೇವಪ್ಪ, ಶಾಸಕರಾದ ದರ್ಶನ್ ಧ್ರುವನಾರಾಯಣ್, ತನ್ವೀರ್ ಸೇಠ್, ರವಿಶಂಕರ್, ಕೆ.ಹರೀಶಗೌಡ, ಅನಿಲ್ ಚಿಕ್ಕಮಾದು, ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ವಿವಿಧ ಪ್ರಾಧಿಕಾರಗಳ ಅಧ್ಯಕ್ಷಕರು, ಸದಸ್ಯರು, ಮುಖಂಡರು ಭಾಗವಹಿಸಿದ್ದರು.