ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಒಪ್ಪಿಗೆ ಸಿಕ್ಕಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡ ಪ್ರತೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಧಾರವಾಡ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದರಿಂದಾಗಿ ವಾರ್ಡ್ ಗಳು ವಿಂಗಡನೆಯಾಗಲಿವೆ.
1ನೇ ವಾರ್ಡ್ ನಿಂದ 26ನೇ ವಾರ್ಡ್ ವರೆಗೂ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರಲಿವೆ. 27ರಿಂದ 82ರ ವರೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರಲಿವೆ. 2014ರಿಂದಲೇ ಇದಕ್ಕೆ ಬೇಡಿಕೆ ಇತ್ತು. ಧಾರವಾಡದ ಜನಸಂಖ್ಯೆ 6 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಇಲ್ಲಿಯ ಜನರು ಬೇಡಿಕೆ ಇಟ್ಟಿದ್ದರು. ಅದಕ್ಕೆ ಇದೀಗ ಅನುಮೋದನೆ ಸಿಕ್ಕಿದೆ. ಹೀಗಾಗಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸದಸ್ಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.