ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಇದೆ. ಧಾರ್ಮಿಕ ಕ್ಷೇತ್ರಗಳಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೋಮವಾರ ರೆಡ್ ಅಲರ್ಟ್ ಇದೆ. ಕೊಡಗು, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಶನಿವಾರದಿಂದಲೇ ನಿರಂತರ ಮಳೆಯಿದೆ. ಭಾನುವಾರ ಇಡೀ ದಿನ ಮಳೆಯಾಗಿದೆ. ರಾತ್ರಿಯೂ ವರುಣ ಅಬ್ಬರಿಸಿದ್ದಾನೆ. ಸೋಮವಾರ ಮುಂಜಾನೆಯಿಂದಲೂ ಮಳೆ ಮುಂದುವರೆದಿದೆ.
ಇನ್ನು ಭಾರೀ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ, ಶಿವಮೊಗ್ಗ ಜಿಲ್ಲೆಯ ಪೂರ್ತಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.