ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಹಿಳಾ ಸಿಬ್ಬಂದಿಗೆ ಮುಟ್ಟಿನ ಸಂದರ್ಭದಲ್ಲಿ ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಕಾರ್ಮಿಕ ಕಾಯ್ದೆ ಅಡಿಯಲ್ಲಿ ನೋಂದಣಿ ಹೊಂದಿರುವ ಉದ್ಯಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮುಟ್ಟಿನ ರಜೆ ನೀಡುವ ಕುರಿತು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ನವೆಂಬರ್ 20, 2025ರಂದು ಅಧಿಸೂಚನೆ ಹೊರಡಿಸಿತ್ತು.
ಬೆಂಗಳೂರು ಹೋಟೆಲ್ ಗಳ ಸಂಘದ ಅಧ್ಯಕ್ಷ ಎಚ್.ಎಸ್ ಸುಬ್ರಹ್ಮಣ್ಯ ಎಂಬುವರ ಇದರ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು. ಇದು ಅಸಂವಿಧಾನಿಕವಾಗಿದೆ. ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದೆ. ಇದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ.
ಅರ್ಜಿದಾರರ ಪರ ವಕೀಲವಾರ ವಾದ ಕೇಳಿದ ಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಜ್ಯ ಸರ್ಕಾರದ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಲು ಆದೇಶ ನೀಡಿ, ವಿಚಾರಣೆಯನ್ನು ಮುಂದೂಡಿದೆ.




