ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಲಕ್ಷ ಲಕ್ಷ ಖರ್ಚು ಮಾಡಿ ಮದುವೆಯಾದ ಎರಡು ತಿಂಗಳಲ್ಲಿಯೇ ನವವಧು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಗಾನವಿ(29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಆಕೆ ಕುಟುಂಬಸ್ಥರು, ಸಂಬಂಧಿಕರು, ಸ್ಥಳೀಯರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಇತ್ತ ಪತಿ, ಅತ್ತೆ ಹಾಗೂ ಆತನ ಸಹೋದರ ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದಾರಂತೆ.
ಹೀಗೆ ಪರಾರಿಯಾದ ಪತಿ ಸೂರಜ್ ನಾಗಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅತ್ತ ಅತ್ತೆ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆಯಂತೆ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದನಂತೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಲಾಗಿದೆ. ಬರೋಬ್ಬರಿ 50 ಲಕ್ಷ ರೂಪಾಯಿ ಖರ್ಚು ಮಾಡಿ ಅಕ್ಟೋಬರ್ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹ ಆರತಕ್ಷತೆ ಮಾಡಲಾಗಿದೆ ಎಂದು ಆಕೆ ಕುಟುಂಬಸ್ಥರು ಹೇಳಿದ್ದಾರೆ.
ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತಿ ಸೂರಜ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಶುಕ್ರವಾರ ಯುವತಿಯ ಕಡೆಯುವರು ಮೃತದೇಹವನ್ನು ವರನ ಮನೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. ಈಗ ಆರೋಪಿ ಸೂರಜ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನಂತೆ.




