ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ನಾಯಕರು ಕೂಡಲಸಂಗಮದಿಂದ ಬಳ್ಳಾರಿ ತನಕ ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಇವರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿರಲಿಲ್ಲ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಕೇಳಿದರೆ, ಹೈಕಮಾಂಡ್ ಒಪ್ಪಿದರೆ ಅವರು ಪಾದಯಾತ್ರೆ ಮಾಡಬಹುದು. ನಮ್ಮದೇನು ತಕರಾರು ಇಲ್ಲ. ಇದರಿಂದ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದರು.
ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಾರೆ ಎಂದಿದ್ದಾರೆ. ಈ ಪಾದಯಾತ್ರೆಯಿಂದ ಪಕ್ಷಕ್ಕೆ ಅನುಕೂಲವಾಗಲಿದೆ, ಶಕ್ತಿ ಬರುತ್ತೆ ಅನ್ನೋದಾದರೆ ವರಿಷ್ಠರು ಒಪ್ಪಿಗೆ ನೀಡುತ್ತಾರೆ. ಅವರು ಪಾದಯಾತ್ರೆ ಮಾಡಬಹುದು. ಪಕ್ಷಕ್ಕೆ ಪೂರಕ, ಸಂಘಟನೆಗೆ ಲಾಭವಾಗಬೇಕು ಅನ್ನೋ ಸದುದ್ದೇಶ ಇದ್ದರೆ ಸಾಕು. ರಾಜ್ಯಾಧ್ಯಕ್ಷ ಆದ ದಿನದಿಂದಲೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದೇನೆ ಎಂದರು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಜಿ.ಎಂ ಸಿದ್ದೇಶ್ವರ, ಅಣ್ಣಾಸಾಹೇಬ್ ಜೊಲ್ಲೆ, ಪ್ರತಾಪ್ ಸಿಂಹ ಸೇರಿ ಕೆಲವು ಅಸಮಾಧಾನಿತರು ಬೆಳಗಾವಿಯಲ್ಲಿ ಸಭೆ ಮಾಡಿದ್ದಾರೆ. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ನಿರಂತರವಾಗಿ ವಾಗ್ದಾಳಿ ಮಾಡಿಕೊಂಡು ಬರುತ್ತಿದ್ದಾರೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಪಾದಯಾತ್ರೆಗೆ ಅನುಮತಿ ಕೊಟ್ಟರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಇತರರು ಭಾಗವಹಿಸುತ್ತಾರ ಎನ್ನುವ ಪ್ರಶ್ನೆ ಮೂಡಿದೆ.