ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕರ್ನಾಟಕ ಸಂಭ್ರಮ-50ರ(Karnataka Sambrama 50) ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ(Guddapura Danammadevi) ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು, ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಶಿಷ್ಟಾಚಾರದಂತೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸುವ ದೃಷ್ಟಿಯಿಂದ ಈಗಾಗಲೇ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಲವು ಸಮಿತಿಗಳನ್ನು ರಚಿಸಿ, ಅಧಿಕಾರಿಗಳನ್ನು ನೇಮಿಸಿ, ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಿ, ವಹಿಸಿದ ಕಾರ್ಯಗಳನ್ನು ಯಾವುದೇ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಲು ಸೂಚಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗೆ ಸೂಚಿಸಿದರು. ಕಾರ್ಯಕ್ರಮದ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತಾನಾಡಿ, ಭದ್ರತಾ ವ್ಯವಸ್ಥೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ವೇಳೆ ಶ್ರೀ ದಾನಮ್ಮದೇವಿ ಟ್ರಸ್ಟಿನ ಅಧ್ಯಕ್ಷ ವಿಜುಗೌಡ ಪಾಟೀಲ,ಕಾರ್ಯದರ್ಶಿ ವಿಠ್ಠಲ್ ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.