ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಕೊಡದೆ ಇರುವುದಕ್ಕೆ ಬೇಸರದಿಂದ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ನೀಡಿರುವ ಜವಾಬ್ದಾರಿ ನಿರ್ವಹಿಸಿದ್ದೇನೆ. ಆದರೆ, ಟಿಕೆಟ್ ಕೊಡದೆ ಇರುವುದಕ್ಕೆ ಬೇಸರವಾಗಿದೆ. ಎಸ್.ವಿ ಸಂಕನೂರ ಅವರಿಗೆ ಟಿಕೆಟ್ ನೀಡಲಾಗಿದೆ. ಇದನ್ನು ಬದಲಿಸಲು ಇನ್ನು ಸಮಯವಿದೆ. 8 ದಿನಗಳಲ್ಲಿ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡದಿದ್ದರೆ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಪಕ್ಷ ನನಗೆ ಮಾಡಿದ ಅನ್ಯಾಯ ಇಡೀ ಬಿಜೆಪಿ ಕಾರ್ಯಕರ್ತರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.




