ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿರುವುದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಕ್ಷೇತ್ರದ ಮತಗಳನ್ನು ಮರುಎಣಿಕೆ ಮಾಡಿ ಫಲಿತಾಂಶದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಮತ ಎಣಿಕೆ ಸರಿಯಾಗಿ ನಡೆದಿಲ್ಲ. ಇದರಲ್ಲಿ ಅಕ್ರಮ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತಕರಾರು ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳಲ್ಲಿ ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಶಾಸಕ ನಂಜೇಗೌಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು ನವೆಂಬರ್ 24ಕ್ಕೆ ವಿಚಾರಣೆ ಮುಂದೂಡಿದೆ.