ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು. ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು 11 ಕಿಲೋ ಮೀಟರ್ ಕೋಟೆಗೋಡೆ ಕಂದಕ ಸಂಪೂರ್ಣ ಸರ್ವೇ ಮಾಡಿಸಿ ಈಗಾಗಲೇ ಮಾರ್ಕ್ ಮಾಡಿಸಲಾಗಿದೆ. ಮನಗೂಳಿ ಅಗಸಿಯಿಂದ ಸಿಂದಗಿ ರೇಲ್ವೆ ಸ್ಟೇಶನ್‌ವರೆಗೆ ಕೋಟೆಗೋಡೆ ಕಂದಕ ಹೂಳು ತೆಗೆಯುವುದು ಮತ್ತು ಸಮತಟ್ಟುಗೊಳಿಸಿ ನೀರನ್ನು ಸಂಪೂರ್ಣವಾಗಿ ಹೊರ ಹಾಕಲು ಈಗಾಗಲೇ ಯೋಜನೆ ರೂಪಿಸಿ ಚಾಲನೆ ನೀಡಲಾಗಿದ್ದು, ಈ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಮತ್ತೊಮ್ಮೆ ಪ್ರವಾಹ ಪರಿಸ್ತಿತಿ ಉಂಟಾಗದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ನಗರದಲ್ಲಿ ಪ್ರವಾಹ ಪರಿಸ್ತಿತಿ ನಿಯಂತ್ರಿಸಲು ಪಾಲಿಕೆ ವ್ಯಾಪ್ತಿಯಲ್ಲಿನ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕ್ಷೀಪ್ರಗತಿಯಲ್ಲಿ ಪೂರ್ಣಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು. ನಗರದ ಕೆ.ಸಿ.ನಗರ, ಗಚ್ಚಿನಕಟ್ಟಿ ಕಾಲನಿ ವಾರ್ಡ್ ನಂ.10ರಲ್ಲಿ ಮಳೆ ನೀರು ಚರಂಡಿ ನಿರ್ಮಿಸುವ ಕಾಮಗಾರಿಯನ್ನು ಕೈಗೊಂಡು ಈ ಭಾಗದಲ್ಲಿ ಪ್ರವಾಹ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ವಾರ್ಡ್ ನಂ.24ರ ಬಾಗಾಯತ್ ಗಲ್ಲಿಯಲ್ಲಿ ಅತಿಕ್ರಮಣ ತೆರವುಗೊಳಿಸಿ ಮಳೆ ಚರಂಡಿ ನಿರ್ಮಿಸುವ ಮೂಲಕ ಪ್ರವಹ ಪರಿಸ್ಥಿತಿ ಎದುರಾಗದಂತೆ ಕ್ರಮ ವಹಿಸಬೇಕು. ಆಲಮಟ್ಟಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದಿಂದ ನೀರು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕೆರೆಗಳನ್ನು ತುಂಬಿಸಲು ಈ ನೀರನ್ನು ಬಳಸಿಕೊಂಡು ಕೆರೆ ತುಂಬಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ನೀಡಿದರು. ಪ್ರವಾಹ ನಿಯಂತ್ರಕ್ಕಾಗಿ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಕುರಿತು, ರಕ್ಷಣಾ ಸಾಮಗ್ರಿಗಳಾದ ಬೋಟ್, ರೋಪ್ಸ್, ಲೈಫ್ ಜಾಕೆಟ್, ಟಾರ್ಚ್ ಸೇರಿದಂತೆ ಇತ್ಯಾದಿ ಸಾಮಗ್ರಿಗಳನ್ನು ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲೂಕಾ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ ಕಾಲಕಾಲಕ್ಕೆ ಅವರಿಂದ ವರದಿ ಪಡೆದುಕೊಡು ಅಗತ್ಯ ಕ್ರಮ ವಹಿಸಲಾಗುತ್ತಿದೆ ಹೇಳಿದರು
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.