Ad imageAd image

ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಸಚಿವ ಎಂ.ಬಿ ಪಾಟೀಲ

Nagesh Talawar
ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಸಚಿವ ಎಂ.ಬಿ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯಲ್ಲಿ ಸಧ್ಯಕ್ಕೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಇಂಡಿ ಹಾಗೂ ಚಡಚಣ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಪಂ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ತಕ್ಷಣ ತೆರಳಿ ಸಭೆ ನಡೆಸಿ ನಿಮ್ಮ ನಿಮ್ಮ ಹಂತದಲ್ಲಿ ಸಮಸ್ಯೆ ಬಗೆಹರಿಸಬೇಕು. ಇಂಡಿ ಸೇರಿದಂತೆ ಎಲ್ಲೆಲ್ಲಿ ನೀರಿನ ಸಮಸ್ಯೆ ಉದ್ಭವಿಸಿದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆಗಳನ್ನು ಕೈಗೆತ್ತಿಕೊಂಡು ಯಾವುದೇ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳುವುದರತ್ತ ನಿಗಾ ವಹಿಸಬೇಕು. ಸಾಧ್ಯವಾದರೆ ಬೋರವೆಲ್ ನಂತಹ ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸದಾ ಸನ್ನದ್ಧವಾಗಿರಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಜಿಲ್ಲೆಯ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ ಇದ್ದ ನೀರಿನ ಲಭ್ಯತೆ ಎರಡೂ ಜಲಾಶಯದಲ್ಲಿ ಇದೆ ಎಂದು ಮಾಹಿತಿ ನೀಡುತ್ತಿದ್ದಂತೆಯೇ ಮಧ್ಯೆ ಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಆಗಸ್ಟ್ ತಿಂಗಳವರೆಗೆ ಕುಡಿಯುವ ನೀರಿನ ಲಭ್ಯತೆಯನ್ನು ಬಳಸಿಕೊಳ್ಳಬೇಕು ಎಂದರು. ಗ್ರಾಮೀಣ ಪ್ರದೇಶ 40 ಬಹುಹಳ್ಳಿ ಕುಡಿಯುವ ನೀರಿನ (ಎಂವಿಎಸ್) ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಪ್ಪಾಜಿ ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಆಲಮಟ್ಟಿ ಜಲಾಶಯದ ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article