ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 2026-27ನೇ ಸಾಲಿನ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಆಡು, ಕುರಿ, ಮೊಲ ಮತ್ತು ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ), ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ವಿಭಾಗಗಳಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ, ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಜಿಲ್ಲೆಯ ಪರಿಣಿತ ಕೃಷಿಕರನ್ನು ಗುರುತಿಸಿ ಅರ್ಹರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.
ತಾಲ್ಲೂಕು ಮಟ್ಟದಲ್ಲಿ ಪ್ರತಿ ತಾಲ್ಲೂಕಿನಲ್ಲಿ 5 ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ 10 ಜನ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಸಕ್ತ ರೈತರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಸಾಧನೆಗಳ ವಿವರ ಬರೆದು ಸೆಪ್ಟಂಬರ್ 10 ರಂದು ಸಂಜೆ 5 ಗಂಟೆಯೊಳಗಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ತಡವಾಗಿ ಸಲ್ಲಿಸಿದ ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತರು ಒಂದೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಆತ್ಮ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



