ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): 319 ಗಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನವೆಂಬರ್ 15ರಂದು ಪರೀಕ್ಷೆ ನಡೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗುರುವಾರ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಎಲ್ಲ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಚುನಾವಣಾ ಮಾದರಿಯಲ್ಲಿ ತರಬೇತಿ ನೀಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಪರೀಕ್ಷೆಯುವ ಅತ್ಯಂತ ಪಾರದರ್ಶಕತೆಯಿಂದ ನಡೆಯಬೇಕು. ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡಬಾರದು. ಕೆಪಿಎಸ್ ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸ್ ನೇಮಕಾತಿ ಮಾದರಿಯಲ್ಲಿಯೇ ಸೂಕ್ತ ಭದ್ರತೆ ತೆಗೆದುಕೊಳ್ಳಬೇಕು. ಸಿಸಿ ಟಿವಿ ಕೇಂದ್ರಗಳ ಮೇಲೆ ನಿರಂತರ ನಿಗಾ ವಹಿಸಬೇಕು.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶವಿಲ್ಲ. ಅನುಮತಿ ಇರುವ ವ್ಯಕ್ತಿಯು ಭದ್ರತೆಯ ತಪಾಸಣೆಗೆ ಒಳಪಡಬೇಕು. ಹೆಚ್ಚುವರಿ ಭದ್ರತಾ ಉಪಕರಣಗಳನ್ನು ಬಾಡಿಗೆ ಮೇಲೆ ಪಡೆಯಬಹುದು. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅವಶ್ಯಕತೆಯಿದ್ದಲ್ಲಿ ಇತರೆ ಕಡೆಗಳಿಂದ ನಿಯೋಜನೆ ಮಾಡಬಹುದು. ಇದೆ ಮೊದಲ ಬಾರಿಗೆ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಲಾಗುತ್ತಿದೆ. ಇದರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜು ಸಿಬ್ಬಂದಿಯಾಗಿರಬೇಕು.
ಖಾಸಗಿ, ಅನುದಾನಿತ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಅಕ್ರಮ ನಡೆದರೆ ಅಂತಹ ಶಿಕ್ಷಣ ಸಂಸ್ಥೆಗಳ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ. ಅಭ್ಯರ್ಥಿಗಳು, ಮಾಧ್ಯಮದವರು ತಮಗೆ ಬಂದ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.


