LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ಪರಿಸ್ಥಿತಿ ಸಮರ್ಥ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಎಂ.ಬಿ ಪಾಟೀಲ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅವಧಿಗೆ ಮುನ್ನವೇ ಮಳೆಗಾಲ ಆರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಲು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಮಳೆ ಸಂಭವಿಸಿ ಪ್ರವಾಹ ಪರಿಸ್ಥಿತಿ ಎದುರಾಗುವ ಪ್ರದೇಶಗಳಲ್ಲಿ ಜನ-ಜಾನುವಾರುಗಳ ರಕ್ಷಣೆಗೆ ಅಗತ್ಯವಿರುವ ಬೋಟ್ ವ್ಯವಸ್ಥೆ, ರೋಪ್ ಸೇರಿದಂತೆ ಅಗತ್ಯ ರಕ್ಷಣಾ ಪರಿಕರಗಳನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ಮುಂಗಾರು ಸಿದ್ಧತೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳಿಗೆ, ಜಾನುವಾರುಗಳಿಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಭಾಗಶಃ ಹಾನಿಯಾದ ಹಾಗೂ ಸಂಪೂರ್ಣವಾಗಿ ಹಾನಿಯಾದ ಮನೆಗಳಿಗೆ ಮಾರ್ಗಸೂಚಿಯಂತೆ ತುರ್ತಾಗಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಜನ-ಜಾನುವಾರುಗಳ ಹಾನಿ, ಸಿಡಿಲು ಬಡಿದು ಸಂಭವಿಸುವ ಹಾನಿಗಳನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಗ್ರಾಮೀಣ ಭಾಗದಲ್ಲಿ ಜನರಲ್ಲಿ ಸೂಕ್ತ ಜಾಗೃತಿ-ತಿಳುವಳಿಕೆ ನೀಡಬೇಕು. ಸಂಭವಿಸಬಹುದಾದ ಹಾನಿಯ ನಿಯಂತ್ರಣ ಹಾಗೂ ತಪ್ಪಿಸಲು ಜನರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಶಾಲಾ ಕಟ್ಟಡಗಳ, ವಿವಿಧ ವಸತಿ ನಿಲಯಗಳ ಸ್ಥಿತಿ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಬೇಕು. ಶಿಥಿಲಾವ್ಯವಸ್ಥೆಯಲ್ಲಿರುವ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳ ಬದಲಾಗಿ ಪರ್ಯಾಯವಾಗಿ ಬಾಡಿಗೆ ಅಥವಾ ಖಾಸಗಿ ಕಟ್ಟಡ ವ್ಯವಸ್ಥೆಯಲ್ಲಿ ಪಾಠ ಬೋಧನೆಗೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಮಳೆಗಾಲದ ಸಂದರ್ಭದಲ್ಲಿ  ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಮಳೆ ನೀರು, ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ವಹಿಸಬೇಕು. ಮಳೆ ನೀರು ನಿಂತು ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ವಿಜಯಪುರ ನಗರದ ಇಬ್ರಾಹಿಂರೋಜಾ ಹಿಂದೆ, ರಾಮನಗರದಿಂದ ಬಿದನೂರ ಪೆಟ್ರೋಲ್ ಪಂಪವರೆಗೆ, ಬಬಲೇಶ್ವರ ನಾಕಾ ರಸ್ತೆ, ಗಚ್ಚಿನಕಟ್ಟಿ ಕಾಲನಿ, ಮನಗೂಳಿ ಅಗಸಿ ಹತ್ತಿರ,  ಅಪ್ಸರಾ ಟಾಕೀಜ್ ಹತ್ತಿರ, ಬಾಗಾಯತ್ ಗಲ್ಲಿ ಸೇರಿದಂತೆ ವಿವಿಧೆಡೆ ಮಳೆ ನೀರು ಒಂದೆಡೆ ನಿಂತು ಅನಾಹುತಗಳಾಗಿವೆ. ಇಂತಹ ಪರಿಸ್ಥಿತಿ ಮರುಕಳಿಸದಂತೆ,  ಪ್ರವಾಹ ಪರಿಸ್ಥಿತಿ ಎದುರಾಗದಂತೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿಗಳನ್ನು ಸ್ವಚ್ಛಗೊಳಿಸಿ, ಅತಿಕ್ರಮಣವಾದ ಜಾಗ ಹಾಗೂ ರಾಜ್‌ಕಾಲುವೆಗಳನ್ನು ಸ್ವಚ್ಛಗೊಳಿಸಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ ಮಾಡಬೇಕು. ಕಲಬೆರಕೆ ರಸಗೊಬ್ಬರ ಪೂರೈಕೆಯಾಗದಂತೆ ತೀವ್ರ ನಿಗಾ ಇರಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಬೀಜ-ರಸಗೊಬ್ಬರಗಳ ಅಗತ್ಯ ದಾಸ್ತಾನಿಟ್ಟುಕೊಂಡು ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST