LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ  ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ 9 ಸಾವಿರ ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹೇಳಿದರು. ನಗರದ ದರಬಾರ ಮೈದಾನದಲ್ಲಿ  ಶನಿವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ನಗರಗಳ ವ್ಯಾಪ್ತಿ ವೃದ್ಧಿಸುತ್ತಿದೆ. ಬೆಳೆಯುತ್ತಿರುವ ನಗರಗಳಲ್ಲಿನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ 112 ಬಸ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸ್ತುತವಾಗಿ ನೂತನ 102 ಹೊಸ ನಗರ ಸಾರಿಗೆ ವಾಹನ ಬಸ್‌ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ 27 ಬಸ್‌ಗಳು ವಿಜಯಪುರ ವಿಭಾಗಕ್ಕೆ ಹಂಚಿಕೆಯಾಗಿದ್ದು ಇಂದು ನೂತನ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

ಮುಂದಿನ ಎರಡು ತಿಂಗಳಲ್ಲಿ 20 ನಾನ್ ಎಸಿ ಸ್ಲೀಪರ್, 20 ಎಸಿ ಸ್ಲೀಪರ್ ಹಾಗೂ 16 ಎ.ಸಿ. ಸೀಟರ್ ಸೇರಿದಂತೆ ಒಟ್ಟು 56 ಹೊಸ ವಾಹನಗಳ ಖರೀದಿಗೆ ಆದೇಶ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಂತ ಹಂತವಾಗಿ ಬಸ್‌ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇದರಿಂದ ನಗರದಿಂದ ನಗರಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಕೆಕೆಆರ್‌ಟಿಸಿ 400 ಬಸ್‌ಗಳ ಖರೀದಿ ಪ್ರಕ್ರಿಯೆ ಜಾರಿಯಲ್ಲಿದ್ದು, ಮುಂದಿನ ಎರಡ್ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ 2 ಸಾವಿರ ಬಸ್‌ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಈ ಪೈಕಿ ಕೆಕೆಆರ್‌ಟಿಸಿಗೆ 400 ಬಸ್‌ಗಳನ್ನು  ಹಾಗೂ ಕೆಎಸ್‌ಆರ್‌ಟಿಸಿಗೆ 900, ವಾಯುವ್ಯ ಕರ್ನಾಟಕ ಸಾರಿಗೆಗೆ 700 ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಪಿಎಂ ಇಸೇವಾ ಯೋಜನೆಯಡಿ 225 ವಿದ್ಯುತ್ ಚಾಲಿತ್ ಬಸ್‌ಗಳನ್ನು ಖರೀದಿಸಲಾಗುತ್ತಿದ್ದು, ಈ ಪೈಕಿ ಕಲ್ಬುರ್ಗಿ 100, ವಿಜಯಪುರಕ್ಕೆ 75 ಹಾಗೂ ಬಳ್ಳಾರಿಗೆ 50 ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಮಾತನಾಡಿ, ಒಂದು ನಗರ ಅಥವಾ ಪ್ರದೇಶದ ಅಭಿವೃದ್ಧಿಯಲ್ಲಿ ಸಾರಿಗೆ ಪಾತ್ರ ಬಹುಮುಖ್ಯವಾದದ್ದು, ಆ ನಿಟ್ಟಿನಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ವಿಜಯಪುರ ಸಾರಿಗೆ ವ್ಯವಸ್ಥೆ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹುಮುಖ್ಯವಾಗಿದ್ದು, ವಿಜಯಪುರದ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವೈ.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಾ ಬಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸೇರಿದಂತೆ ಪಾಲಿಕೆ ವಿವಿಧ ಸದಸ್ಯರು, ವಿವಿಧ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST