ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ವೈದ್ಯರ ನಿರ್ಲಕ್ಷ್ಯದಿಂದಾಗಿ ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 11 ರೋಗಿಗಳು ಮೃತಪಟ್ಟಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಈ ಘಟನೆ ಸಂಬಂಧ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರ ಆಕ್ರೋಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ವಿ.ವಿ ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರನ್ನು ಸಮಾಧಾನ ಪಡಿಸಿದರು. ಅಲ್ಲದೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಆಸ್ಪತ್ರೆಯ ನಿರ್ದೇಶಕ ಡಾ.ದಿನೇಶ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯ ಮೀರಿ ಬಂದ ಕಾರಣದಿಂದ ರೋಗಿ ಮೃತಪಟ್ಟಿದ್ದಾರೆ ಎಂದು ಮೆಡಿಕಲ್ ಸೂಪರಿಟೆಂಡೆಂಟ್ ಡಾ.ಕೆ.ಎಸ್.ಸದಾನಂದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ರೋಗಿಯನ್ನು ರಾತ್ರಿ 12 ಗಂಟೆಗೆ ಕರೆದುಕೊಂಡು ಬಂದಿದ್ದಾರೆ. ಮೂವರು ವೈದ್ಯರು ಇದ್ದರು. ಆರೈಕೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳಿವೆ ಎಂದಿದ್ದಾರೆ. ದಿನನಿತ್ಯ ಇದೆ ಪ್ರಮಾಣದಲ್ಲಿ ಜನರು ಮೃತಪಡುತ್ತಿದ್ದಾರೆ ಅನ್ನೋ ಆಘಾತಕಾರಿ ವಿಚಾರ ಹೇಳಿದ್ದಾರೆ.



