ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಣ್ಣ ವ್ಯಾಪಾರಿಗಳಿಗೆ, ವರ್ತಕರಿಗೆ ತೆರಿಗೆ ಇಲಾಖೆ ಜಿಎಸ್ ಟಿ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದರು. ಈ ವೇಳೆ ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಜಿಎಸ್ ಟಿ ನೋಟಿಸ್ ಕುರಿತು ಗೊಂದಲವಿದೆ. ಇದರಲ್ಲಿ ಸಾಲದ ಮೊತ್ತ, ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಯುಪಿಐ ಅಡಿ 40 ಲಕ್ಷ ರೂಪಾಯಿಗೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೋಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದರು.
ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೋಟೀಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ. ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.