ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜನರ ರಕ್ಷಣೆ, ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಹ ತಮ್ಮ ಒತ್ತಡದ ನಡುವೆಯೂ ಇಂತಹ ಕ್ರೀಯಾಶೀಲ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಒತ್ತಡ ನಿವಾರಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಅವರು ಸಲಹೆ ನೀಡಿದರು. ನಗರದ ಪೋಲಿಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗಳಿಂದ ದೇಹ ಸದೃಢತೆಯೊಂದಿಗೆ ಮಾನಸಿಕ ಸದೃಢತೆ ಕಾಯ್ದುಕೊಳ್ಳಲು ಸಹಕಾರಿಯಾಗಿದೆ. ಆರೋಗ್ಯಯುತ ಹಾಗೂ ಕ್ರಿಯಾಶೀಲತೆಯಿಂದಿರಲು ನಿರಂತರವಾಗಿ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಯಾಶೀಲ ಮನಸ್ಸನ್ನು ಹೊಂದಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವಾಗತಿಸಿ, ಕ್ರೀಡಾಕೂಟಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು, ಗೆಲುವನ್ನು ಲೆಕ್ಕಿಸದೇ ಸ್ಪೂರ್ತಿ, ಚೈತನ್ಯದಿಂದ ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಎಂದು ಹೇಳಿದರು. ಇದಕ್ಕೂ ಮೊದಲು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ವಿಜೇತರು ಕ್ರೀಡಾ ಜ್ಯೋತಿಯನ್ನು ನೀಡುವುದರ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. ಕ್ರೀಡಾಪಟುಗಳಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ, ಎನ್.ಸಿಸಿ ಅಧಿಕಾರಿ ಗಿರೀಶ ಶಿಂಧೆ, ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಬಿ.ಎಂ ಕೊಟ್ರೇಶ, ಪೊಲೀಸ್ ಇಲಾಖೆಯ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.